ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಮತ್ತೆ ಮಳೆರಾಯ ತಂಪೆರೆದಿದ್ದಾನೆ. ದಿಢೀರ್ ಮಳೆಯಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿದೆ. ಬೆಂಗಳೂರು ಸೇರಿದಂತೆ ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 13 ಹಾಗೂ 14ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದ ಮಳೆಯಾಗಲಿದೆ.
ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಇನ್ನು, ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದಲೇ ಮಳೆ ಆರಂಭಗೊಳ್ಳಲಿದ್ದು, ನಂತರದ ದಿನಗಳಲ್ಲಿ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕೆ.ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್ ಬ್ಯಾಂಕ್ ಸರ್ಕಲ್, ಕೆ.ಆರ್.ಮಾರ್ಕೆಟ್, ಯಲಹಂಕ, ನೆಲಮಂಗಲ ಸೇರಿದಂತೆ ಹಲವೆಡೆ ಬಿರು ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.