ಬಳ್ಳಾರಿ: ಮೈನ್ಸ್​ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದು ತಂದೆ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ನಂದಿಹಳ್ಳಿ ರಸ್ತೆಯಲ್ಲಿ ಗುರುವಾರ ನಡೆಯಿತು.

ಮೃತರನ್ನು ಬೆಳ್ಳಿ ನಾಗರಾಜ್ (45) ಹಾಗೂ ಅವರ ಪುತ್ರ ದುರ್ಗೇಶ್ ಎಂದು ಗುರುತಿಸಲಾಗಿದೆ. ಇವರು ಸಂಡೂರಿನಿಂದ ನಂದಿಹಳ್ಳಿ ಕಡೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತಿ ವೇಗವಾಗಿ ಬಂದ ಮೈನ್ಸ್​ ಲಾರಿ ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪೊಲೀಸರು ಘಟನಾ ಸ್ಥಳ ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.