ಬೆಳಗಾವಿ: ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಿದ ಪ್ರಸಂಗ ಮಂಗಳವಾರ ನಡೆದಿದೆ. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ, ಪಿ ರಾಜೀವ, ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ನಡಹಳ್ಳಿ ಸೇರಿದಂತೆ ಹಲವಾರು ನಾಯಕರು ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ನಗರದ ಹೊರವಲಯದ ಮಾಲಿನಿ ಸಿಟಿ ಪ್ರದೇಶದಲ್ಲಿ ನಡೆದ ಪ್ರತಿಭಟನಾ ಸಮಾವೇಶದ ನಂತರ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಪಾದಯಾತ್ರೆ ಮೂಲಕ ಹೊರಟಿದ್ದ ನಾಯಕರನ್ನು ಅಲಾರವಾಡಾ ಕ್ರಾಸ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.