ಬೆಂಗಳೂರು: ತೈಲ ಬೆಲೆ ಏರಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಮುಖಂಡರು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನ ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.

ದ್ವಿಚಕ್ರ ವಾಹನಗಳಿಗೆ ಹೂವಿನ ಹಾರಗಳನ್ನು ಹಾಕಿ ಅಣುಕು ಅಂತ್ಯಕ್ರಿಯೆ ನಡೆಸುವ ಮೂಲಕ ಗಮನ ಸೆಳೆದರು. ಸೈಕಲ್ಗಳನ್ನು ಏರಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಈ ಸಂದರ್ಭ ಮಾತನಾಡಿದ ಪಕ್ಷದ ಪ್ರಧಾನಕಾರ್ಯದರ್ಶಿ ಮೋಹನ್ ದಾಸರಿ, ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ ಇನ್ನೊಂದು ಕೈಯಲ್ಲಿ ಜನಸಾಮಾನ್ಯರ ಹಣವನ್ನು ತೆರಿಗೆ ರೂಪದಲ್ಲಿ ಕಿತ್ತುಕೊಳ್ಳುತ್ತಿದೆ.

ಸಮರ್ಪಕವಾಗಿ ಸಂಪನ್ಮೂಲ ಕ್ರೋಡಿಕರಣ ಮಾಡಿದರೆ, ಭ್ರಷ್ಟಾಚಾರ ಮತ್ತು ಕಮಿಷನ್ ದಂಧೆಯನ್ನು ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಇತರೆ ಎಲ್ಲ ರೀತಿಯ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಹಣ ಉಳಿಯುತ್ತದೆ ಅಭಿಪ್ರಾಯ ವ್ಯಕ್ತಪಡಿಸಿದರು.

ಮೇ 2023ರಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೇವಲ 1 ವರ್ಷದ ಅವಧಿಯೊಳಗೆ ಅಬಕಾರಿ ತೆರಿಗೆಯನ್ನು ಮೂರು ಬಾರಿ ಹೆಚ್ಚಿಸಿದ್ದಾರೆ. ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಗರಿಷ್ಠ ಶೇ. 25ರವರೆಗೆ ಏರಿಕೆ ಮಾಡಿದ್ದಾರೆ. ನಾನಾ ಹಂತದ ವಾಹನಗಳಿಗೆ ವಿಧಿಸುವ ತೆರಿಗೆಯನ್ನು ಹೆಚ್ಚಳ ಮಾಡಿದ್ದಾರೆ. ಬೇರೆ ಯಾವೆಲ್ಲ ಮೂಲಗಳಿಂದ ತೆರಿಗೆ ಹೆಸರಲ್ಲಿ ಜನಸಾಮಾನ್ಯರನ್ನು ಹಿಂಡಬಹುದು ಎಂದು ಹುಡುಕುತ್ತಿದ್ದಾರೆ ಎಂದು ಆರೋಪಿಸಿದರು.