ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಂಡಿಗೋ ಸಂಸ್ಥೆಯ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರವೊಂದು ಪತ್ತೆಯಾಗಿದ್ದು, ಕೆಲಕಾಲ ಪ್ರಯಾಣಿಕರು ಹಾಗೂ ವಿಮಾನ ನಿಲ್ದಾಣದ ಸಿಬ್ಬಂದಿಯಲ್ಲಿ ತೀವ್ರ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಉತ್ತರ ಪ್ರದೇಶದ ಲಖನೌದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣದ ವೇಳೆ ಈ ಬೆದರಿಕೆ ಪತ್ರ ಪತ್ತೆಯಾಗಿದೆ. ವಿಮಾನದ ಶೌಚಾಲಯದ ಬಳಿ ಬೆದರಿಕೆ ಸಂದೇಶ ಬರೆದಿದ್ದ ಪತ್ರ ಕಂಡುಬಂದ ತಕ್ಷಣ ಜಾಗರೂಕರಾದ ಸಿಬ್ಬಂದಿ, ತಕ್ಷಣವೇ ಪೈಲಟ್‌ಗೆ ಮಾಹಿತಿ ತಲುಪಿಸಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಪೈಲಟ್, ಏರ್ ಟ್ರಾಫಿಕ್ ಕಂಟ್ರೋಲ್ ಗೆ ತುರ್ತು ಸಂದೇಶ ರವಾನಿಸಿದ್ದಾರೆ.

ವಿಮಾನವು ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಲ್ಯಾಂಡಿಂಗ್ ಆಗುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲಾ ಪ್ರಯಾಣಿಕರನ್ನು ಹಾಗೂ ಸಿಬ್ಬಂದಿಯನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಬಾಂಬ್ ನಿಷ್ಕ್ರಿಯ ದಳ, ಸಿಐಎಸ್‌ಎಫ್ ಭದ್ರತಾ ಪಡೆಗಳು, ಶ್ವಾನದಳ ಹಾಗೂ ವಿಮಾನ ನಿಲ್ದಾಣದ ಪೊಲೀಸರು ಇಡೀ ವಿಮಾನವನ್ನು ಸಂಪೂರ್ಣವಾಗಿ ತಪಾಸಣೆ ನಡೆಸಿದರು.

ಪ್ರಸ್ತುತ ಭದ್ರತಾ ಸಂಸ್ಥೆಗಳು ಹಾಗೂ ಪೊಲೀಸರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಇದು ಕಿಡಿಗೇಡಿಗಳು ನಡೆಸಿದ ಹುಸಿ ಬೆದರಿಕೆಯೇ ಅಥವಾ ಬೇರೇನಾದರೂ ಕೃತ್ಯವೇ ಎಂಬುದರ ಕುರಿತು ತನಿಖೆ ಚುರುಕುಗೊಳಿಸಿದ್ದಾರೆ. ವಿಮಾನ ನಿಲ್ದಾಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಬೆದರಿಕೆ ಪತ್ರ ಬರೆದಿಟ್ಟ ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.