ಬೆಂಗಳೂರು: ನಿನ್ನೆ ಸುರಿದ ಆಲಿಕಲ್ಲು ಸಹಿತ ಭಾರಿ ಮಳೆಗೆ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಏಳು ಮಂದಿ ಸಾವನ್ನಪ್ಪಿದ ಘಟನೆಗೆ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಈ ದುರದೃಷ್ಟಕರ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಕೇಂದ್ರ ಸರ್ಕಾರವು ಆರ್ಥಿಕ ನೆರವು ಘೋಷಿಸಿದೆ.

ಘಟನೆಯ ಕುರಿತು ತಮ್ಮ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಿ ಮೋದಿ, “ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಹಾಗೂ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ” ಎಂದು ಹಾರೈಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ 50,000 ರೂಪಾಯಿಗಳ ಪರಿಹಾರವನ್ನು ಘೋಷಿಸಿದ್ದಾರೆ.

ಈಗಾಗಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಜ್ಯ ಸರ್ಕಾರದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಉಚಿತ ಚಿಕಿತ್ಸೆ ನೀಡುವಂತೆ ಆದೇಶಿಸಿದ್ದಾರೆ. ಮಳೆಯಿಂದ ರಕ್ಷಣೆ ಪಡೆಯಲು ಗೋಡೆಯ ಪಕ್ಕದಲ್ಲಿ ನಿಂತಿದ್ದ ಐವರು ಬೀದಿಬದಿ ವ್ಯಾಪಾರಿಗಳು ಹಾಗೂ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಈ ದುರಂತದಲ್ಲಿ ಬಲಿಯಾಗಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಬುಧವಾರ ರಾತ್ರಿಯೇ ಮೃತದೇಹಗಳನ್ನು ಅವರ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಗೋಡೆ ಕುಸಿತದ ಬಗ್ಗೆ ಸಮಗ್ರ ತನಿಖೆ ನಡೆಸಿ, ಅಧಿಕಾರಿಗಳ ನಿರ್ಲಕ್ಷ್ಯವಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

— PMO India (@PMOIndia) April 29, 2026