ಬೆಂಗಳೂರು: ವಿವಿಧ ಇಲಾಖೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 40ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಗೆ ಬರೋಬ್ಬರಿ ₹5.30 ಕೋಟಿ ವಂಚಿಸಿದ್ದ ತಂದೆ ಮತ್ತು ಮಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರ್‌.ಟಿ ನಗರದ ಗಂಗೇನಹಳ್ಳಿ ನಿವಾಸಿಗಳಾದ ಎಂ.ಎ. ಮನ್ಸೂರ್ ಅಹಮದ್ ಹಾಗೂ ಎಂಬಿಎ ಪದವೀಧರೆಯಾದ ಆತನ ಪುತ್ರಿ ಎಂ.ಎಂ. ಶಂಶಾದ್ ಬೇಗಂ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಆರೋಪಿಗಳು ಮುಂಬೈ, ಬೆಂಗಳೂರು ಹಾಗೂ ಕೋಲ್ಕತ್ತದಲ್ಲಿ ನಕಲಿ ತರಬೇತಿ ಕೇಂದ್ರಗಳನ್ನು ತೆರೆದು ನಿರುದ್ಯೋಗಿಗಳನ್ನು ಸಂಪರ್ಕಿಸುತ್ತಿದ್ದರು.

ರೈಲ್ವೆ, ಆದಾಯ ತೆರಿಗೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಲ್ಲಿ ಕೆಲಸ ಕೊಡಿಸುವುದಾಗಿ ನಕಲಿ ನೇಮಕಾತಿ ಪತ್ರ ನೀಡುತ್ತಿದ್ದರು. ಅಭ್ಯರ್ಥಿಗಳಿಗೆ ನಂಬಿಕೆ ಬರಲು ಕೆಲವು ತಿಂಗಳು ತಾವೇ ಸಂಬಳವನ್ನೂ ನೀಡುತ್ತಿದ್ದರು ಎನ್ನಲಾಗಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ಸಂಗಮೇಶ್ ರಾಚಯ್ಯ ಎಂಬುವರು ನೀಡಿದ ದೂರಿನ ಮೇರೆಗೆ ತಲೆಮರೆಸಿಕೊಂಡಿದ್ದ ಇವರನ್ನು ಹೊರರಾಜ್ಯದಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜಕೀಯ ಮುಖಂಡರ ಹೆಸರೇಳಿ ವಂಚಿಸುತ್ತಿದ್ದ ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರಿದಿದೆ.

ಹೊರ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ನಗರಕ್ಕೆ ಕರೆ ತರಲಾಗಿದೆ. ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ರಾಜಕೀಯ ಪಕ್ಷಗಳ ಮುಖಂಡರ ಪರಿಚಯವಿದ್ದು, ಅವರ ಮೂಲಕ ಸರ್ಕಾರಿ ಕೆಲಸ ಕೊಡಿಸುತ್ತೇವೆ’ ಎಂಬುದಾಗಿ ಅಭ್ಯರ್ಥಿಗಳನ್ನು ನಂಬಿಸುತ್ತಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳು ತಪ್ಪೋಪ್ಪಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.