ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ, ನಟ ದರ್ಶನ್‌ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ. ಮನೆಯ ಊಟದ ತರಿಸಿಕೊಳ್ಳಲು ಅವಕಾಶ ನೀಡಬೇಕು ಎಂಬ ರಿಟ್ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ ಮಾಡಲಾಗಿದೆ.

ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಗುರುವಾರ ಅವರ ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನಲೆಯಲ್ಲಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್‌ಗೆ ಎಲ್ಲಾ 17 ಆರೋಪಿಗಳನ್ನು ಹಾಜರುಪಡಿಸಿದ್ದರು.

ಕೋರ್ಟ್ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್‌ 1ರ ತನಕ ವಿಸ್ತರಣೆ ಮಾಡಿತು. ನಟ ದರ್ಶನ್ ಸೇರಿ 13 ಆರೋಪಿಗಳು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ, ನಾಲ್ವರು ಆರೋಪಿಗಳು ತುಮಕೂರು ಜೈಲಿನಲ್ಲಿದ್ದಾರೆ.