ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಇಂದು (ಆಗಸ್ಟ್ 20) ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಹೇಳಿದರು.
ಸಮಾಜದಲ್ಲಿ ಮೇಲು ಕೀಳು ಇರಬಾರದು. ಬಡವ ಬಲ್ಲಿದ ಇರಬಾರದು. ಜಾತಿ ವ್ಯವಸ್ಥೆ ಇರಬಾರದು, ಎಲ್ಲರೂ ಮನುಷ್ಯರಾಗಿ ಸಮಾನವಾಗಿ ಬದುಕಬೇಕು ಎಂಬುವುದೇ ಬಸವಾದಿ ಶರಣರ ಕನಸು. ಇದೇ ತತ್ವದ ಆಧಾರದ ಮೇಲೆ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರು ಸಹ ಈ ತತ್ವ ಸಿದ್ದಾಂತಗಳ ಆಧಾರದಲ್ಲಿ ಆಡಳಿತ ನಡೆಸಿ, ರಾಜ್ಯದಲ್ಲಿ ಹಲವಾರು ಕ್ರಾಂತಿಕಾರಿ ಬದಲಾವಣೆಗಳನ್ನು ತಂದರು. ದೇವರಾಜ ಅರಸು ಅವರು ಅರಸು ಮನೆತನದಲ್ಲಿ ಹುಟ್ಟಿದ್ದರೂ, ಸಮಾಜದ ತಳ ಸಮುದಾಯವಾದ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರ ಬಗ್ಗೆ ಬಹಳ ಕಾಳಜಿ ಹೊಂದಿದ್ದರು. ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು, ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಲು ನಮ್ಮ ಸಂವಿಧಾನ ಒತ್ತು ನೀಡಿದೆ. ಇದೇ ಹಾದಿಯಲ್ಲಿ ಸಂವಿಧಾನಕ್ಕೆ ಬದ್ಧವಾಗಿ ನಾವು ಆಡಳಿತ ನಡೆಸುತ್ತಿದ್ದೇವೆ. ನೆಹರು ಕಾಲದಿಂದ ಇಂದಿನವರೆಗೂ ಅಸಮಾನನತೆಯ ಸಮಾಜವನ್ನು ತೊಡೆದು ಸಮ ಸಮಾಜ ನಿರ್ಮಾಣಕ್ಕಾಗಿ ನಿರಂತರವಾಗಿ ಪ್ರಯತ್ನಗಳನ್ನು ನಡೆಸಲಾಗಿದೆ ಎಂದರು.
ಮುಂದುವರೆದು ಮಾತನಾಡಿದ ಅವರು ಅರಸು ಅವರು ಉಳುವವನೇ ಭೂಮಿಯೊಡೆಯ ಎಂದು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಿ ಅಸಂಖ್ಯಾತ ಜನರಿಗೆ ಭೂಮಿಯ ಮಾಲಕತ್ವ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಭೂಮಿಯ ಹಕ್ಕನ್ನು ಖಾತ್ರಿಪಡಿಸಲು 79 ಎ ಮತ್ತು ಬಿ ಗೆ ಮಾಡಿರುವ ತಿದ್ದುಪಡಿಯನ್ನು ಮತ್ತೆ ಸರಿಪಡಿಸಲಾಗುವುದು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಖರ್ಚು ಮಾಡಲು ಎಸ್‌ಸಿಪಿ/ಟಿಎಸ್‌ಪಿ ಕಾಯ್ದೆಗೆ ತಿದ್ದುಪಡಿ ತಂದದ್ದು ನಮ್ಮ ಸರ್ಕಾರ. ಕೇಂದ್ರದಲ್ಲಿ ಈ ರೀತಿಯ ಕಾಯ್ದೆಯನ್ನು ಜಾರಿಗೆ ತರದೇ ಇಲ್ಲಿ ಅನುಷ್ಠಾನದ ಬಗ್ಗೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಈ ರೀತಿ ಟೀಕಿಸಲು ಅವರಿಗೆ ಯಾವುದೇ ನೈತಿಕ ಹಕ್ಕು ಇಲ್ಲ ಎಂದರು.
ಕರ್ನಾಟಕ ಏಕೀಕರಣ 1956 ನವಂಬರ್ 1 ರಂದೇ ಆಗಿದ್ದರೂ, 1973 ರಲ್ಲಿ ದೇವರಾಜ ಅರಸು ಅವರು ಕರ್ನಾಟಕ ಎಂದು ನಾಮಕರಣ ಮಾಡಿದರು. ಈ ಹಿನ್ನೆಲೆಯಲ್ಲಿಯೇ ನಾವು ಕರ್ನಾಟಕ ಸಂಭ್ರಮ ವರ್ಷಾಚರಣೆ ನಡೆಸುತ್ತಿದ್ದು, ನವೆಂಬರ್‌ನಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ನವೆಂಬರ್ 1 ರಂದು ಅನಾವರಣಗೊಳಿಸಲಾಗುವುದು ತಿಳಿಸಿದರು.

