ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಹವಾಮಾನ ವೈಪರೀತ್ಯ ಉಂಟಾಗುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.