ಬೆಂಗಳೂರು: ಕರ್ನಾಟಕದ ಕರಾವಳಿ ಭಾಗಗಳಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಮಳೆಯಾದರೆ, ಒಳನಾಡಿನಲ್ಲಿ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.
ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಪ್ರತ್ಯೇಕವಾಗಿ ಭಾರಿ ಮಳೆ ಶಿವಮೊಗ್ಗ ಜಿಲ್ಲೆಯಲ್ಲಿ ಅಬ್ಬರಿಸಲಿದೆ. ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಲಘುವಾಗಿರಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 28 ಮತ್ತು 20 ಡಿ.ಸೆ ಇರಲಿದೆ. ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ಬೆಳಗಾವಿ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಆಗಸ್ಟ್ 31ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

