ಬೆಂಗಳೂರು: ರಾಜ್ಯಾದ್ಯಂತ ಬಹುತೇಕ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುಂದುವರಿದಿದೆ. ಸೆಪ್ಟೆಂಬರ್‌ 5 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ  ನೀಡಿದ್ದು, ಕೆಲ ಕಡೆ ರೆಡ್‌ ಅಲರ್ಟ್‌ ಅನ್ನು ಘೋಷಣೆ ಮಾಡಲಾಗಿದೆ.

ಬೆಂಗಳೂರಲ್ಲಿಯೂ ವರುಣನ ಅಬ್ಬರ ಜೋರಾಗಿದ್ದು, ಭಾರೀ ಮಳೆಯಾಗುತ್ತಿದೆ. ಮಧ್ಯಾಹ್ನದವರೆಗೂ ಬಿಸಿಲು ಇದ್ದರೂ ಸಂಜೆ ವೇಳೆಗೆ ಮಳೆ ಪ್ರಾರಂಭವಾಗುತ್ತಿದೆ. ಇಂದು ಕೂಡಾ ವರುಣನ ಅಬ್ಬರ ಜೋರಾಗಿರುವ ಸಾಧ್ಯತೆ ಇದೆ. ಇನ್ನು ರಾಜ್ಯದ ಕರಾವಳಿ ಭಾಗದಲ್ಲಿ ಸೆಪ್ಟೆಂಬರ್ ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಲವಾದ ಗಾಳಿಯೂ ಬೀಸಲಿದೆ.

ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಕರಾವಳಿಯಲ್ಲಿ ಮಳೆಯ ತೀವ್ರತೆಯಿಂದಾಗಿ ಈ ಎಚ್ಚರಿಕೆಯನ್ನು ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತುಮಕೂರು, ವಿಜಯನಗರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ.