ಬೆಂಗಳೂರು: ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಬಹುತೇಕ ಎಲ್ಲಾ ಭಾಗಗಳಲ್ಲಿ ಮುಂದಿನ 7 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.
ಮೇ 24 ರಿಂದ ಮೇ 30 ರವರೆಗೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 25 ರಂದು ಅಲ್ಲಲ್ಲಿ ಸಿಡಿಲು ಸಹಿತ ಆಲಿಕಲ್ಲು ಮಳೆಯಾಗುವ ಮುನ್ಸೂಚನೆ ಇದೆ.
ಸಮುದ್ರದಲ್ಲಿ ಉಂಟಾಗಿರುವ ವಾತಾವರಣದ ಏರುಪೇರಿನಿಂದಾಗಿ ಕರಾವಳಿ ಕರ್ನಾಟಕದಲ್ಲಿ ಬಿರುಗಾಳಿಯ ತೀವ್ರತೆ ಹೆಚ್ಚಿರಲಿದೆ. ಮೇ 28 ರವರೆಗೆ ಸಮುದ್ರ ತೀರದಲ್ಲಿ ಭೀಕರ ಗಾಳಿ ಬೀಸಲಿದ್ದು, ಗಾಳಿಯ ವೇಗವು ಪ್ರತಿ ಗಂಟೆಗೆ ಬರೋಬ್ಬರಿ 60 ಕಿಲೋಮೀಟರ್ ತಲುಪುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಸಂದೇಶ ರವಾನಿಸಿದೆ.
ರಾಜ್ಯದ ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಲಿದೆ.
ರಾಜಧಾನಿ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮುಂದಿನ ಕೆಲವು ದಿನಗಳ ಕಾಲ ಸಂಜೆ ಅಥವಾ ರಾತ್ರಿಯ ವೇಳೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳ ಹಲವೆಡೆ ಆಲಿಕಲ್ಲು ಮಳೆಯಾಗುವ ಆತಂಕ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

