ಬೆಂಗಳೂರು: ಗೌರಿ-ಗಣೇಶ ಹಬ್ಬ ಹಾಗೂ ವಾರಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಸೆಪ್ಟೆಂಬರ್ 11ರಿಂದ 13ರವರೆಗೆ ಬೆಂಗಳೂರಿನಿಂದ ರಾಜ್ಯ ಹಾಗೂ ಹೊರರಾಜ್ಯದ ವಿವಿಧ ಪ್ರದೇಶಗಳಿಗೆ ಒಟ್ಟು 2,400 ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ತರಲಾಗುತ್ತಿದೆ. ಸೆಪ್ಟೆಂಬರ್ 14ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಮರಳುವ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಸೇರಿದಂತೆ ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್‌ಗೆ ವಿಶೇಷ ಬಸ್‌ಗಳು ಸಂಚರಿಸಲಿವೆ.
ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಹಾಗೂ ಮಡಿಕೇರಿ ಮಾರ್ಗಗಳಿಗೆ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ. ಇದೇ ವೇಳೆ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ತಮಿಳುನಾಡು ಮತ್ತು ಕೇರಳದ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚ್ಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಳಂ ಸೇರಿದಂತೆ ವಿವಿಧ ನಗರಗಳಿಗೆ ಪ್ರೀಮಿಯರ್ ವಿಶೇಷ ಬಸ್‌ಗಳು ಸಂಚರಿಸಲಿವೆ.
ಪ್ರಯಾಣಿಕರಿಗೆ ವಿಶೇಷ ಬಸ್ ಗಳಿಗೆ ಮುಂಗಡ ಟಿಕೆಟ್ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದ್ದು, ಟಿಕೆಟ್‌ನಲ್ಲಿ ನಮೂದಿಸಿರುವ ಬೋರ್ಡಿಂಗ್ ಸ್ಥಳವನ್ನು ಗಮನಿಸುವಂತೆ ಕೆಎಸ್‌ಆರ್‌ಟಿಸಿ ಮನವಿ ಮಾಡಿದೆ. ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಂದೇ ಟಿಕೆಟ್‌ನಲ್ಲಿ ಬುಕ್ಕಿಂಗ್ ಮಾಡಿದರೆ ಶೇಕಡಾ 5ರಷ್ಟು ರಿಯಾಯಿತಿ ದೊರೆಯಲಿದೆ. ಜೊತೆಗೆ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಂದೇ ವೇಳೆ ಕಾಯ್ದಿರಿಸಿದರೆ ವಾಪಸಾತಿ ಪ್ರಯಾಣದ ದರದಲ್ಲಿ ಶೇಕಡಾ 10ರಷ್ಟು ರಿಯಾಯಿತಿ ನೀಡಲಾಗುತ್ತದೆ.
ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲಾ ಬಸ್ ನಿಲ್ದಾಣಗಳಿಂದಲೂ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆ ಮಾಡಲು ಕೆಎಸ್‌ಆರ್‌ಟಿಸಿ ಸಿದ್ಧತೆ ನಡೆಸಿದೆ. ವಿಶೇಷ ಬಸ್‌ಗಳ ಹೊರಡುವ ಸ್ಥಳ ಹಾಗೂ ಸಮಯದ ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ವೆಬ್‌ಸೈಟ್ ಮತ್ತು ಮುಂಗಡ ಟಿಕೆಟ್ ವ್ಯವಸ್ಥೆಯಲ್ಲಿ ಪಡೆಯಬಹುದಾಗಿದೆ.
ಹಬ್ಬದ ಸಂಭ್ರಮಕ್ಕೆ ಊರಿಗೆ ಹೊರಡುವ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿಯ ಈ ವಿಶೇಷ ಬಸ್ ವ್ಯವಸ್ಥೆ ದೊಡ್ಡ ಅನುಕೂಲವಾಗಲಿದೆ.

