ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಒಣ ಹವಾಮಾನ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇಲ್ಲವಾದರೂ, ಕೆಲವು ನಿರ್ದಿಷ್ಟ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಸೆಪ್ಟೆಂಬರ್ 8 ಮತ್ತು 9ರಂದು ಸಾಧಾರಣ ಮಳೆಯಾಗಬಹುದು. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ರಾಯಚೂರು, ಯಾದಗಿರಿ ಹಾಗೂ ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲೂ ಚದುರಿದಂತೆ ಮಳೆಯಾಗಬಹುದು ಎಂದು ಹವಾಮಾನ ಕೇಂದ್ರ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಂಪೂರ್ಣ ಒಣ ಹವೆ ಕಂಡುಬಂದಿದೆ. ಕಲಬುರಗಿ ಜಿಲ್ಲೆಯ ಸೆಡಂ, ಕಮಲಾಪುರ ಹಾಗೂ ಯಾದಗಿರಿಯ ಹುಣಸಗಿಯಲ್ಲಿ ತಲಾ 1 ಸೆಂಟಿಮೀಟರ್‌ನಷ್ಟು ಸಣ್ಣ ಪ್ರಮಾಣದ ಮಳೆ ದಾಖಲಾಗಿದೆ.