ಬೆಂಗಳೂರು: ಪಿಒಪಿ ಗಣೇಶ ಮೂರ್ತಿಗಳ ವಿರುದ್ಧ ಕ್ರಮ ಕೈಗೊಂಡ ಬೆನ್ನಲ್ಲೇ ಇದೀಗ ಪಟಾಕಿ ಬಳಕೆ ಹಾಗೂ ಮಾರಾಟಕ್ಕೂ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮ ಜಾರಿಗೆ ಮುಂದಾಗಿದೆ. ಹಬ್ಬದ ಸಂದರ್ಭದಲ್ಲಿ ವಾಯುಮಾಲಿನ್ಯ ನಿಯಂತ್ರಿಸುವ ಉದ್ದೇಶದಿಂದ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ.

ಹಸಿರು ಪಟಾಕಿಗಳನ್ನು ಹೊರತುಪಡಿಸಿ ಹೆಚ್ಚಿನ ಮಾಲಿನ್ಯ ಉಂಟುಮಾಡುವ ಪಟಾಕಿಗಳ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ನಿಯಮ ಉಲ್ಲಂಘಿಸಿ ಮಾಲಿನ್ಯಕಾರಕ ಪಟಾಕಿಗಳನ್ನು ಮಾರಾಟ ಮಾಡುವುದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ಪಟಾಕಿ ಅಂಗಡಿ ಮಾಲೀಕರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುವುದಾಗಿ ಮುಚ್ಚಳಿಕೆ ಬರೆದುಕೊಡಬೇಕಾಗುತ್ತದೆ. ನಿಯಮ ಪಾಲನೆಯ ಬಗ್ಗೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾ ವಹಿಸಲಿದ್ದಾರೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಪಟಾಕಿಗಳಿಂದ ಉಂಟಾಗುವ ವಾಯು ಹಾಗೂ ಶಬ್ದ ಮಾಲಿನ್ಯವನ್ನು ಕಡಿಮೆ ಮಾಡಲು ಸರ್ಕಾರ ಈ ಕ್ರಮ ಕೈಗೊಳ್ಳುತ್ತಿದೆ. ಹೀಗಾಗಿ ಪಟಾಕಿ ಖರೀದಿಸುವವರು ಹಾಗೂ ಮಾರಾಟಗಾರರು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.