ಬೆಂಗಳೂರು: ಆಗಸ್ಟ್ 15 ನಮಗೆ ಐತಿಹಾಸಿಕ ದಿನವಾಗಿದ್ದು, ಸ್ವಾತಂತ್ರ್ಯ ನೀಡಲು ಹೋರಾಟ ನಡೆಸಿದ ಮಹಾಪುರುಷರು ಮತ್ತು ಹುತಾತ್ಮರನ್ನು ಸ್ಮರಿಸುವ ದಿನ. ಈ ದಿನದಂದು ಅವರಿಂದ ಸ್ಫೂರ್ತಿ ಪಡೆದು ಹೊಸ ಹಾದಿ ಮತ್ತು ಹೊಸ ಸಂಕಲ್ಪದೊಂದಿಗೆ ಮುನ್ನಡೆಯಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜಭವನದಲ್ಲಿನ ಮಹಾತ್ಮ ಗಾಂಧೀಜಿ ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಬಳಿಕ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಭದ್ರತಾ ಅಧಿಕಾರಿ ಎಸಿಪಿ ನಿಂಗಾರೆಡ್ಡಿ ನೇತೃತ್ವದ ಪೊಲೀಸ್ ತಂಡದಿಂದ ಗೌರವ ರಕ್ಷೆ ನೀಡಲಾಯಿತು. ದೇಶ ಸೇರಿದಂತೆ ಜಗತ್ತು ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಎದುರಿಸುತ್ತಿದೆ. ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
‘ಅಮ್ಮನ ಹೆಸರಲ್ಲಿ ಒಂದು ಮರ’ ಅಭಿಯಾನದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಕೆಲಸ ಮಾಡಬೇಕು. ದೇಶದ ಆರ್ಥಿಕತೆಯನ್ನು ಬಲಪಡಿಸುವ ಜೊತೆಗೆ ಪರಿಸರವನ್ನು ಸಂರಕ್ಷಿಸಲು ನಾವೆಲ್ಲರೂ ಪ್ರತಿಜ್ಞೆ ಮಾಡೋಣ ಎಂದು ರಾಜ್ಯಪಾಲರು ಕರೆ ನೀಡಿದರು.

