ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಅಕ್ಟೋಬರ್ 3 ಮತ್ತು 4ರಂದು ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಮುಂದಿನ ಎರಡು ದಿನಗಳ ಕಾಲ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯಿದೆ. ಉತ್ತರ ಒಳನಾಡಿನ ವಿಜಯಪುರ, ಯಾದಗಿರಿ, ರಾಯಚೂರು, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಕೆಲವು ಕಡೆಗಳಲ್ಲಿ ಮಾತ್ರ ಹಗುರ ಮಳೆಯಾಗಬಹುದು.

ಇದೇ ವೇಳೆ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ರಾಮನಗರ, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯಲಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿದ್ದು, ಕೆಲವೇ ಕೆಲವು ಭಾಗಗಳಲ್ಲಿ ಮಾತ್ರ ಮಳೆಯಾಗಿದೆ. ಕೊಡಗು ಜಿಲ್ಲೆಯ ನಾಪೋಕ್ಲುವಿನಲ್ಲಿ ಅತ್ಯಧಿಕ 4 ಸೆಂ.ಮೀ ಮಳೆಯಾಗಿದ್ದರೆ, ಭಾಗಮಂಡಲ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ತಲಾ 3 ಸೆಂ.ಮೀ ಮಳೆ ದಾಖಲಾಗಿದೆ.