ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ. ಪ್ರಜ್ವಲ್ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಈವರೆಗೆ ಆರೋಪಿ ವಿರುದ್ಧದ ಎರಡು ಪ್ರಕರಣಗಳ ತನಿಖೆಯನ್ನು ಅಧಿಕಾರಿಗಳು ಮುಗಿಸಿದ್ದಾರೆ.
ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣ ಹಾಗೂ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ಗೆ ಹಾಜರುಪಡಿಸಲಾಗುವುದು.

