ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಿಗೆ ಮಂಗಳವಾರ ವರುಣ ತಂಪನ್ನು ನೀಡಿದ್ದು, ಇದೀಗ ಮಾರ್ಚ್ 23 ರಿಂದ ಮೂರು ದಿನಗಳ ಕಾಲ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಂಗಳವಾರ ಮಧ್ಯಾಹ್ನದ ಬಳಿಕ ದಕ್ಷಿಣ ಕನ್ನಡ, ಕೊಡಗು ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗಿದೆ. ಇದೀಗ ರಾಜ್ಯದಲ್ಲಿ ಮುಂದಿನ ಮೂರು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರು ಸೇರಿದಂತೆ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಕೋಲಾರ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಇನ್ನು ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

