ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಬಲಿಯಾದ ಪ್ರಕರಣವು ಅಧಿಕೃತವಾಗಿ ಸಿಐಡಿಗೆ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ವಿಶೇಷ ತನಿಖಾ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಸಿಐಡಿ ತಂಡವು ಪರಿಶೀಲನೆ ನಡೆಸಿ, ಮಾಹಿತಿ ಕಲೆ ಹಾಕುತ್ತಿದೆ. ಈ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಕೆಎಸ್ಸಿಎ ಅಧ್ಯಕ್ಷರು ಹಾಗೂ ಸಿಬ್ಬಂದಿಯಿಂದ ಸಿಐಡಿ ಅಧಿಕಾರಿಗಳು ಹೇಳಿಕೆ ಪಡೆದುಕೊಳ್ಳಲಿದೆ.
ಸಿಐಡಿ ಎಸ್ಪಿ ಶುಭನ್ವಿತಾ ನೇತೃತ್ವದಲ್ಲಿ ಡಿವೈಎಸ್ಪಿಗಳಾದ ಪುರುಷೋತ್ತಮ್ ಹಾಗೂ ಗೌತಮ್ ಅವರನ್ನೊಳಗೊಂಡ ತಂಡ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣದಲ್ಲಿ ಈಗಾಗಲೇ ಬಂಧಿಸಲ್ಪಟ್ಟಿರುವ ಆರ್ಸಿಬಿ ಫ್ರಾಂಚೈಸಿಯ ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥ ನಿಖಿಲ್ ಸೋಸ್ಲೆ, ಕಾರ್ಯಕ್ರಮದ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದ ಡಿಎನ್ಎ ಎಂಟರ್ಟೈನ್ಮೆಂಟ್ ಮ್ಯಾನೇಜ್ಮೆಂಟ್ ಕಂಪೆನಿಯ ಪ್ರತಿನಿಧಿಗಳಾದ ಸುನಿಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಎರಡು ದಿನ ಸರಕಾರಿ ರಜೆ ಇರುವುದರಿಂದ ಸೋಮವಾರ ಆರೋಪಿಗಳನ್ನು ಬಾಡಿ ವಾರಂಟ್ ಆಧಾರದಲ್ಲಿ ಸಿಐಡಿ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಗಳಿವೆ.

