ಬೆಂಗಳೂರು : ರಾಜ್ಯಾದ್ಯಂತ ಆಗಸ್ಟ್ 27ರಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಮಳೆ ಹೆಚ್ಚಿರುವ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದ್ದು, ಈ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ.

ಕರ್ನಾಟಕದ ಕರಾವಳಿ ಭಾಗದ ಜಿಲ್ಲೆಗಳು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗಣೇಶ ಚತುರ್ಥಿ ಬಳಿಕ ಮಳೆ ಹೆಚ್ಚಾಗಲಿದೆ.

ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, , ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಾಗಲಕೋಟೆಯಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಮುನ್ಸೂಚನೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಹಾಗೂ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ಬೀದರ್‌ನಲ್ಲಿ ಆ.28ರಿಂದ ಮುಂದಿನ 2 ದಿನ ಹಾಗೂ ಕೊಡಗು, ಬೆಳಗಾವಿಯಲ್ಲಿ ಆ.29ರಂದು ಬಿರುಸಾಗಿ ಸುರಿಯುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದೆ. ಯಾದಗಿರಿಯಲ್ಲಿ ಆ.28ರಂದು ಯೆಲ್ಲೋ ಅಲರ್ಟ್‌ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದ್ದು ರಾಜ್ಯಾದ್ಯಂತ ಈ ಬಾರಿ ಹೆಚ್ಚಿನ ಮಳೆಯಾಗಿದೆ.