ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 10ರಿಂದ ಮಳೆಯ ಅಬ್ಬರ ಹೆಚ್ಚಾಗಲಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ವಿಜಯಪುರ, ಬಾಗಲಕೋಟೆ, ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ 30-40 ಕೀ.ಮಿ/ಗಂ ವೇಗದಲ್ಲಿ ಗಾಳಿ ಮಳೆ ಜೋರಾಗಿರಲಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

