ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದರೆ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14ರಂದು ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಆಗಸ್ಟ್ 13 ರಂದು ಮೋಡಕವಿದ ವಾತಾವರಣದೊಂದಿಗೆ ಜಿಟಿಜಿಟಿ ಅಥವಾ ಹಗುರ ಮಳೆಯಾಗಲಿದೆ. ಆಗಸ್ಟ್ 14 ರ ವೇಳೆಗೆ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಲಿದ್ದು, ಕೆಲವು ಕಡೆಗಳಲ್ಲಿ ಸಾಧಾರಣ ಜಿಟಿಜಿಟಿ ಮಳೆ ಮುಂದುವರಿಯಲಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಆಗಸ್ಟ್ 13 ಮತ್ತು 14 ರಂದು ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಕೆಲವೆಡೆ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

