ಬೆಂಗಳೂರು : ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ 17 ರಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯ ಜೊತೆಗೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇರಲಿದ್ದು, ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರಾವಳಿ ಮಾತ್ರವಲ್ಲದೆ ರಾಜ್ಯದ ಒಳನಾಡಿನ ಜಿಲ್ಲೆಗಳಿಗೂ ಮಳೆ ವ್ಯಾಪಿಸಲಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಉತ್ತರ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ವರುಣನ ಸಿಂಚನವಾಗಲಿದೆ.
ರಾಜಧಾನಿ ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ನಗರದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ತಂಗಾಳಿ ಅಥವಾ ಬಿರುಗಾಳಿ ಬೀಸುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ನಗರದ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

