ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 9 ರಿಂದ ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ರಾಜ್ಯದ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಸಿಎಸ್ ಪಾಟೀಲ್ ಅವರು ರಾಜ್ಯದ ಪ್ರಸ್ತುತ ಹವಾಮಾನ ಪರಿಸ್ಥಿತಿಯ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.
ಕರಾವಳಿ ಭಾಗದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಈ ಐದು ದಿನಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಹಾಗೂ ಅತಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಜೂನ್ 9 ರಿಂದ 11 ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ ಭಾರಿ ಮಳೆಯಾಗಿರುವುದು ವರದಿಯಾಗಿದೆ.
ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಜೂನ್ 9 ರಿಂದ 11 ರವರೆಗೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್, ಕಲಬುರಗಿ, ಯಾದಗಿರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇದೇ ಅವಧಿಯಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಸಾರ್ವಜನಿಕರಿಗೆ ಮತ್ತು ಅಧಿಕಾರಿಗಳಿಗೆ ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ನೀಡಿದೆ. ಸಾರ್ವಜನಿಕರು ತಮ್ಮ ಮನೆಗಳ ಸೋರಿಕೆ ತಡೆಗಟ್ಟಲು, ಶಿಥಿಲಗೊಂಡ ಕಚ್ಚಾ ಮನೆಗಳಲ್ಲಿದ್ದರೆ ಬೇರೆಡೆಗೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಮಳೆ ಹಾಗೂ ಗಾಳಿಯ ಸಮಯದಲ್ಲಿ ಮರ ಅಥವಾ ವಿದ್ಯುತ್ ಕಂಬಗಳ ಕೆಳಗೆ ನಿಲ್ಲಬಾರದು ಮತ್ತು ಜಲಾವೃತಗೊಂಡ ರಸ್ತೆ ಹಾಗೂ ಸೇತುವೆಗಳ ಮೇಲೆ ಸಂಚರಿಸಬಾರದು ಎಂದು ಎಚ್ಚರಿಸಲಾಗಿದೆ.

