ಚಾಮರಾಜನಗರ: ಖಾಸಗಿ ಪೈನಾನ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಅಶ್ವಿನಿ ಬಡಾವಣೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ನಾಗಣಾಪುರ ಗ್ರಾಮದ ಅಭಿಷೇಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಖಾಸಗಿ ಪೈನಾನ್ಸ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಯಾರು ಇಲ್ಲದ ವೇಳೆ ಕಚೇರಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎನ್ನುವುದು ಸದ್ಯಕ್ಕೆ ತಿಳಿದು ಬಂದಿಲ್ಲವಾದರೂ ಪೊಲೀಸರ ತನಿಖೆ ಬಳಿಕ ಗೊತ್ತಾಗಬೇಕಿದೆ.
ವಿಷಯ ತಿಳಿದು ಗುಂಡ್ಲುಪೇಟೆ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ನಂತರ ಮೃತದೇಹ ವನ್ನು ವಶಕ್ಕೆ ಪಡೆದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ವಾರಸುದಾರರಿಗೆ ಹಸ್ತಾಂತರ ಮಾಡಲಾಯಿತು. ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

