ಹುಣಸೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಕಾಮಕನಿಗೆ ಗ್ರಾಮಸ್ಥರು ಗೂಸಾ ನೀಡಿ ಪೊಲೀಸರಿಗೊಪ್ಪಿಸಿರುವ ಘಟನೆ ಹುಣಸೂರು ತಾಲೂಕಿನಲ್ಲಿ ನಡೆದಿದೆ.
ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮನಹಳ್ಳಿಯ ಗ್ರಾಮದ ಲೋಕೇಶ್(46) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಲೋಕೇಶ್ ಡಿ.3ರಂದು 9ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಸಂಬಂದ ಬಾಲಕಿಯ ಪೋಷಕರು, ಸಾಮಾಜಿಕ ಕಾಳಜಿ ಉಳ್ಳವರು ಬಿಳಿಕೆರೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ತೆಗೆ ಕ್ರಮವಹಿಸಿದ್ದರು. ವಿಷಯ ತಿಳಿದ ಆರೋಪಿ ಲೋಕೇಶ್ ಪೊಲೀಸರಿಗೆ ಶರಣಾಗಲು ನಿರ್ಧರಿಸಿ ಬಿಳಿಕೆರೆ ಪೊಲೀಸ್ ಠಾಣೆಗೆ ಬರುತ್ತಿದ್ದ ವೇಳೆ ಗ್ರಾಮಸ್ಥರು ಕಾಮಕನನ್ನು ಪತ್ತೆ ಹಚ್ಚಿ ಗೂಸಾ ನೀಡಿ 112ಗೆ ಮಾಹಿತಿ ನೀಡಿದ ಮೇರೆಗೆ ತಕ್ಷಣವೇ ಆಗಮಿಸಿ ದಾಸ್ತಿಕೊಳ ಗ್ರಾಮದ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಗಾಯಗೊಂಡಿದ್ದ ಆರೋಪಿಯನ್ನ ಬಿಳಿಕೆರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ನಂತರ ಇಂದು ಬೆಳಗ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಆರೋಪಿಯನ್ನ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದಾರೆ. ನೊಂದ ಬಾಲಕಿಯನ್ನ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗೆ ಕಠಿಣವಾದ ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

