ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಮನವಿಗೆ ಮಣಿದ ಕರ್ನಾಟಕ ಸರ್ಕಾರ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಪ್ರಾರಂಭಿಸಿದೆ. ಬೆಂಗಳೂರಿನ ಪಟ್ಟೇಗಾರಪಾಳ್ಯದ ಅಂಗನವಾಡಿ ಕೇಂದ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಕ್ಕೆ ಇಂದು (ಜು.22) ಸಾಂಕೇತಿಕವಾಗಿ ಚಾಲನೆ ನೀಡಿದರು. ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪರಿಚಯಿಸುತ್ತಿರುವ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ.
ರಾಜ್ಯದಲ್ಲಿ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಆರಂಭಿಸಲು ಸರ್ಕಾರ ಚಿಂತನೆ ನಡೆಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ಕೂಡ ಮಾಡಿದ್ದರು.
ಸರ್ಕಾರಕ್ಕೆ ಈ ಹಿಂದೆ ಹಲವು ಬಾರಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ-ಯುಕೆಜಿ ತರಗತಿ ಆರಂಭಿಸುವುದಕ್ಕೆ ಮನವಿ ಮಾಡಲಾಗಿತ್ತು. ಆದರೆ ಈ ಮನವಿಗೆ ಸರ್ಕಾರಗಳು ಪುರಸ್ಕರಿಸಿರಲಿಲ್ಲ. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿಗೆ ತೆಗೆದರೆ ಅಂಗನವಾಡಿ ಕೇಂದ್ರಗಳು ಖಾಲಿ ಆಗುತ್ತವೆ. ಕಾರ್ಯಕರ್ತೆಯರು, ಸಹಾಯಕರಿಯರು, ಅಡುಗೆ ಸಹಾಯಕಿರು ಕೆಲಸ ಕಳೆದುಕೊಳ್ಳುತ್ತಾರೆ ಎಂದು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲೇ ಅಂಗನವಾಡಿ ಕೇಂದ್ರದಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಬೇಕೆಂದು ಒತ್ತಾಯಿದ್ದರು.ಇದೀಗ, ಸರ್ಕಾರ ಅಂಗನವಾಡಿಯಲ್ಲೇ ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಿದೆ.

