ನವದೆಹಲಿ: ಜೂನ್ 18ರಂದು ನಡೆದಿದ್ದ ಯುಜಿಸಿ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಹಲವು ದೂರುಗಳು ಬಂದಿದ್ದು, ಈ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಕೇಂದ್ರ ಶಿಕ್ಷಣ ಸಚಿವಾಲಯವು, ಪರೀಕ್ಷೆ ನಡೆದ ಮರುದಿನವೇ ಯುಜಿಸಿ ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಅಲ್ಲದೇ ಯುಜಿಸಿ ನೆಟ್ ಪರೀಕ್ಷೆ ಅಕ್ರಮದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದೆ.
ಜೂನ್ 18ರ ಮಂಗಳವಾರದಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ.
ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸುವ ತೀರ್ಮಾನ ಕೈಗೊಂಡಿದೆ.
ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದ್ದು, ಹೊಸದಾಗಿ ಪರೀಕ್ಷೆ ನಡೆಸುವುದಾಗಿ ಕೇಂದ್ರ ಶಿಕ್ಷಣ ಇಲಾಖೆ ತಿಳಿಸಿದೆ.

