ಮಂಗಳೂರು: ಸುರತ್ಕಲ್ನಲ್ಲಿರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NITK) ಸಂಸ್ಥೆಯ 24ನೇ ವಾರ್ಷಿಕ ಘಟಿಕೋತ್ಸವ ನವೆಂಬರ್ 14ರಂದು ನಡೆಯಲಿದೆ.
NITKಯ ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ನಡೆಯಲಿರುವ ಈ ಸಮಾರಂಭವು ಎರಡು ಅವಧಿಗಳಲ್ಲಿ ಜರುಗಲಿದೆ. ಬೆಳಿಗ್ಗೆ ಸ್ನಾತಕೋತ್ತರ ಹಾಗೂ ಪಿಎಚ್ಡಿ ವಿದ್ಯಾರ್ಥಿಗಳಿಗೆ ಮತ್ತು ಮಧ್ಯಾಹ್ನ ಪದವಿಪೂರ್ವ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ.
ಇಂಡಿಯನ್ ನ್ಯಾಷನಲ್ ಅಕಾಡೆಮಿ ಆಫ್ ಇಂಜಿನಿಯರಿಂಗ್ನ ಅಧ್ಯಕ್ಷರಾದ ಜೆ.ಡಿ. ಪಾಟೀಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, NITK ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಎಂ. ಮುರುಗಪ್ಪನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಈ ಬಾರಿ ಒಟ್ಟು 1,986 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲಿದ್ದು, ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 46 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಗುತ್ತದೆ.
1960ರಲ್ಲಿ ಕರ್ನಾಟಕ ರೀಜನಲ್ ಇಂಜಿನಿಯರಿಂಗ್ ಕಾಲೇಜಾಗಿ ಆರಂಭವಾದ NITK, ಇಂದು ದೇಶದ ಪ್ರಮುಖ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. NIRF 2025ರ ಶ್ರೇಯಾಂಕದಲ್ಲಿ ದೇಶದ ಅಗ್ರ 20 ಎಂಜಿನಿಯರಿಂಗ್ ಸಂಸ್ಥೆಗಳಲ್ಲಿ ಸ್ಥಾನ ಪಡೆದಿರುವುದು ಸಂಸ್ಥೆಯ ಮತ್ತೊಂದು ಹೆಗ್ಗಳಿಕೆಯಾಗಿದೆ ಎಂದು ಸಂಘಟಕರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿಯನ್ನ ನೀಡಿದರು.

