ಮಂಗಳೂರು: ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಪಿಯು (ಪದವಿ ಪೂರ್ವ) ಮತ್ತು ಡಿಪ್ಲೋಮಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಮಟ್ಟದ “ಇನ್ಸ್ಪೈರ್ (INSPIRE 2026)” ತಾಂತ್ರಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಉತ್ಸವವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರಾದ ಪ್ರೊ. ಸತೀಶ್ ಬಿ. ನಾಯ್ಕ್ ಮತ್ತು ಗೌರವ ಅತಿಥಿಗಳಾದ ಡಾ. ದಯಾನಂದ ಪೈ (ಪ್ರಾಂಶುಪಾಲರು, ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು, ಕಟಪಾಡಿ ಹಾಗೂ ಅಧ್ಯಕ್ಷರು, ಉಡುಪಿ ಜಿಲ್ಲಾ ಅನುದಾನಿತ ಮತ್ತು ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ (ರಿ.)) ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ. ಎ. ಮಿತ್ರ ಎಸ್. ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದರು. ಗೌರವ ಅತಿಥಿಗಳಾದ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ. ಎ. ವಿಜಯಲಕ್ಷ್ಮಿ ಆರ್. ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ, ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಎನ್ ಹೆಗಡೆ, ಇನ್ಸ್ಪೈರ್-26 ಕಾರ್ಯಕ್ರಮದ ಸಂಚಾಲಕರಾದ ಪ್ರೊ. ವಿಶ್ವಾಸ್ ಸಿ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಡಾ. ರಾಮಕೃಷ್ಣ ಎನ್ ಹೆಗಡೆ ಯವರು ಸ್ವಾಗತ ಭಾಷಣವನ್ನು ಮಾಡಿದರು, ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ 38 ವರ್ಷಗಳ ಸಾಧನೆಯ ಕಿರುಚಿತ್ರಣವನ್ನು ನೀಡಿದರು. ಪ್ರೊ. ವಿಶ್ವಾಸ್ ಸಿ. ಶೆಟ್ಟಿ ಯವರು “ಇನ್ಸ್ಪೈರ್ 2026” ಕಾರ್ಯಕ್ರಮ ಮತ್ತು ವಿವಿಧ ಸ್ಪರ್ಧೆಗಳ ಕುರಿತು ಸಮಗ್ರ ಮಾಹಿತಿಯನ್ನು ಸಭೆಗೆ ನೀಡಿದರು. ಪ್ರೊ. ಕೆ. ಶ್ರೀನಾಥ್ ರಾವ್ ರವರು ಮುಖ್ಯ ಅತಿಥಿಗಳನ್ನು ಹಾಗೂ ಗೌರವ ಅತಿಥಿಗಳನ್ನುಸಭೆಗೆ ಪರಿಚಯಿಸಿದರು.

ಉದ್ಘಾಟನಾ ಭಾಷಣವನ್ನು ಮಾಡಿದ ಮುಖ್ಯ ಅತಿಥಿ ಪ್ರೊ. ಶ್ರೀ ಸತೀಶ್ ಬಿ. ನಾಯ್ಕ್ ರವರು ಮಾತನಾಡಿ, ಸಮಾರಂಭದಲ್ಲಿ ನೆರೆದ ವಿದ್ಯಾರ್ಥಿಗಳನ್ನು ಹಾಗೂ ಕಾರ್ಯಕ್ರಮದ ಆಯೋಜಕರನ್ನು ಅಭಿನಂದಿಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಜನ್ಮತಃ ವಿಶಿಷ್ಟ ಪ್ರತಿಭೆ ಮತ್ತು ಸಾಮರ್ಥ್ಯಗಳನ್ನು ಹೊಂದಿರುತ್ತಾರೆ. ಆದರೆ, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಲು ಅವರಿಗೆ ಸೂಕ್ತ ವೇದಿಕೆ ಮತ್ತು ಅವಕಾಶಗಳ ಅಗತ್ಯವಿದೆ. ಈ ನಿಟ್ಟಿನಲ್ಲಿ, ಪಿಯುಸಿ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಹಾಗೂ ಕೌಶಲ್ಯಗಳನ್ನು ಅನಾವರಣಗೊಳಿಸಲು ಇನ್‌ಸ್ಪೈರ್ 2026 ಕಾರ್ಯಕ್ರಮದ ಮೂಲಕ ಅತ್ಯುತ್ತಮ ವೇದಿಕೆ ಮತ್ತು ಅವಕಾಶವನ್ನು ಕಲ್ಪಿಸಿರುವ ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು.

ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳು ಹಾಗೂ ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದು ಅವರು ಕರೆ ನೀಡಿದರು. ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಮಾನವಾಗಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಬದುಕಿನಲ್ಲಿ ಉತ್ತಮ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವುದರ ಜೊತೆಗೆ ಅವರಲ್ಲಿರುವ ಸುಪ್ತ ಪ್ರತಿಭೆ ಮತ್ತು ಸಾಮರ್ಥ್ಯಗಳನ್ನು ಹೊರತರುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು. ಜೀವನದಲ್ಲಿ ಎದುರಾಗುವ ಸೋಲು ಮತ್ತು ಸವಾಲುಗಳಿಂದ ಎಂದಿಗೂ ನಿರಾಶರಾಗದೆ, ಆಶಾವಾದಿಗಳಾಗಿ, ದೃಢಸಂಕಲ್ಪದಿಂದ ಹಾಗೂ ಸಮರ್ಪಣಾ ಮನೋಭಾವದಿಂದ ಶ್ರಮಿಸಬೇಕು.

ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಯಶಸ್ಸು ಖಂಡಿತವಾಗಿಯೂ ದೊರೆಯುತ್ತದೆ ಎಂದು ಪ್ರೊ. ಸತೀಶ್ ಬಿ. ನಾಯಕ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಮ್ಮ ಜೀವನದಲ್ಲಿ ದೊರೆಯುವ ಪ್ರತಿಯೊಂದು ಅವಕಾಶವನ್ನೂ ಸದುಪಯೋಗಪಡಿಸಿಕೊಳ್ಳಬೇಕು, ಸೃಜನಶೀಲತೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಸಮಾಜಕ್ಕೆ ಒಳಿತಾಗುವಂತಹ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಶೈಕ್ಷಣಿಕ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಸಂವಹನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ಹಾಗೂ ವಿವಿಧ ಕೌಶಲ್ಯಗಳನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಪ್ರಯತ್ನಿಸಬೇಕು ಎಂದು ಪ್ರೇರೇಪಿಸಿದರು.

ಗೌರವ ಅತಿಥಿಗಳಾದ ಡಾ. ದಯಾನಂದ ಪೈ ಅವರು ಮಾತನಾಡಿ, ಶಿಕ್ಷಣವು ವಿವಿಧ ಆಯಾಮಗಳನ್ನು ಹೊಂದಿದ್ದು, ಪದವಿ ಪಡೆಯುವುದು ಅದರಲ್ಲಿನ ಒಂದು ಭಾಗ ಮಾತ್ರವಾಗಿದೆ ಎಂದು ಅಭಿಪ್ರಾಯಪಟ್ಟರು. ಶಿಕ್ಷಣದ ಪ್ರತಿಯೊಂದು ಹಂತವೂ ತನ್ನದೇ ಆದ ಕಲಿಕಾ ವಿಧಾನ, ಪ್ರಕ್ರಿಯೆ ಮತ್ತು ಮಹತ್ವವನ್ನು ಹೊಂದಿದೆ ಎಂದು ತಿಳಿಸಿದರು. ಸ್ವಾಮಿ ವಿವೇಕಾನಂದರ ಮಾತುಗಳನ್ನು ಉಲ್ಲೇಖಿಸಿದ ಅವರು, “ಜ್ಞಾನವೇ ಶಿಕ್ಷಣದ ನಿಜವಾದ ಸಾರವಾಗಿದ್ದು, ಜ್ಞಾನಾರ್ಜನೆಯು ಜೀವನದುದ್ದಕ್ಕೂ ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿರಬೇಕು”ಎಂದು ಹೇಳಿದರು. ಇನ್‌ಸ್ಪೈರ್ 2026 ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಮತ್ತು ಸಾಮರ್ಥ್ಯಗಳನ್ನು ಪ್ರದರ್ಶಿಸಲು ಅತ್ಯುತ್ತಮ ವೇದಿಕೆಯಾಗಿದೆ ಎಂದು ಶ್ಲಾಘಿಸಿದರು.

ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು, ದೃಢಸಂಕಲ್ಪದಿಂದ ಶ್ರಮಿಸಬೇಕು ಹಾಗೂ ತಮ್ಮ ಗುರಿಗಳ ಸಾಧನೆಗಾಗಿ ಸಮರ್ಪಣಾ ಮನೋಭಾವದಿಂದ ನಿರಂತರವಾಗಿ ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಜೀವನದಲ್ಲಿ ಯಶಸ್ಸು ಸಾಧಿಸಲು ಸಮರ್ಪಣೆ ಮತ್ತು ಬದ್ಧತೆ ಅತ್ಯಂತ ಪ್ರಮುಖ ಗುಣಗಳಾಗಿವೆ ಎಂದು ಅವರು ತಿಳಿಸಿದರು. ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡ ಡಾ. ದಯಾನಂದ ಪೈ ಅವರು, ತಮ್ಮ ಪುತ್ರಿ ಡಾ. ಅನನ್ಯಾ, ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ಬಿ.ಡಿ.ಎಸ್. ಪದವಿಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದರು.

ತಮ್ಮ ಅನುಭವದ ಆಧಾರದ ಮೇಲೆ, ಉನ್ನತ ಶಿಕ್ಷಣವನ್ನು ಪಡೆಯಲು ಶ್ರೀನಿವಾಸ್ ವಿಶ್ವವಿದ್ಯಾಲಯವು ಉತ್ತಮ, ಅನುಕೂಲಕರ ಹಾಗೂ ವಿದ್ಯಾರ್ಥಿಗಳಿಗೆ ಪೂರಕವಾದ ಶೈಕ್ಷಣಿಕ ವಾತಾವರಣವನ್ನು ಒದಗಿಸುತ್ತಿದೆ. ಶೈಕ್ಷಣಿಕ ಹಾಗೂ ವೃತ್ತಿಪರ ಜೀವನದಲ್ಲಿ ಉನ್ನತ ಸಾಧನೆ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಶ್ರೀನಿವಾಸ್ ವಿಶ್ವವಿದ್ಯಾಲಯವು ಉತ್ತಮ ಆಯ್ಕೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಗೌರವ ಅತಿಥಿಗಳಾದ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ. ಎ. ವಿಜಯಲಕ್ಷ್ಮಿ ಆರ್. ರಾವ್ ಹಾಗೂ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಕೆ. ಸತ್ಯನಾರಾಯಣ ರೆಡ್ಡಿ ಯವರು ಸ್ಪರ್ಧಾಳುಗಳಿಗೆ ಶುಭವನ್ನು ಕೋರಿದರು.

ಅಧ್ಯಕ್ಷೀಯ ಭಾಷಣವನ್ನು ಮಾಡಿದ ಶ್ರೀನಿವಾಸ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರೊ. ಶ್ರೀಮತಿ ಎ. ಮಿತ್ರ ಎಸ್. ರಾವ್ ರವರು ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳನ್ನು ಕೋರಿದರು. ವಯಸ್ಸು ಎಷ್ಟೇ ಆಗಿದ್ದರೂ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಮಗುವಿನ ಮುಗ್ಧತೆ ಮತ್ತು ಭಾವನೆಗಳು ಸದಾ ಜೀವಂತವಾಗಿರುತ್ತವೆ ಎಂದು ಅಭಿಪ್ರಾಯಪಟ್ಟರು.

ಶಿಕ್ಷಣ ಕ್ಷೇತ್ರದಲ್ಲಿ ಶಿಶುವಿಹಾರದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಸ್ಪರ್ಧಾತ್ಮಕತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಉಲ್ಲೇಖಿಸಿದ ಅವರು, ಪರೀಕ್ಷೆಗಳನ್ನು ಎಂದಿಗೂ ಭಯ ಅಥವಾ ಮಾನಸಿಕ ಒತ್ತಡದ ಮೂಲವೆಂದು ಪರಿಗಣಿಸಬಾರದು. ಬದಲಾಗಿ, ಪರೀಕ್ಷೆಗಳನ್ನು ಕಲಿಯಲು, ಬೆಳೆಯಲು ಹಾಗೂ ತಮ್ಮ ಜ್ಞಾನ ಮತ್ತು ಸಾಮರ್ಥ್ಯಗಳನ್ನು ಮೌಲ್ಯಮಾಪನ ಮಾಡಿಕೊಳ್ಳಲು ದೊರೆಯುವ ಒಂದು ಉತ್ತಮ ಅವಕಾಶವೆಂದು ಸ್ವೀಕರಿಸಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳು ಪರೀಕ್ಷೆಯ ಭಯ ಮತ್ತು ಒತ್ತಡದಿಂದ ಹೊರಬಂದು ಸಕಾರಾತ್ಮಕ ಮನೋಭಾವದಿಂದ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಸಲಹೆ ನೀಡಿದರು.

ಸೋಲು ಅನುಭವಿಸುವವರೇ ನಿಜವಾದ ವಿಜೇತರು ಎಂದು ಅಭಿಪ್ರಾಯಪಟ್ಟ ಅವರು, ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಆತ್ಮವಿಶ್ವಾಸ ಮತ್ತು ಧೈರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕೇವಲ ಎರಡು ಅಥವಾ ಮೂರು ಗಂಟೆಗಳ ಪರೀಕ್ಷೆಯಿಂದ ವಿದ್ಯಾರ್ಥಿಯ ಸಂಪೂರ್ಣ ಸಾಮರ್ಥ್ಯ, ಪ್ರತಿಭೆ ಮತ್ತು ಸುಪ್ತ ಕೌಶಲ್ಯಗಳನ್ನು ಅಳೆಯಲು ಸಾಧ್ಯವಿಲ್ಲ. ಜೀವನದಲ್ಲಿ ಗೆಲುವು ಮತ್ತು ಸೋಲು ಸಹಜ ಪ್ರಕ್ರಿಯೆಗಳಾಗಿದ್ದು, ಕೇವಲ ಗೆಲುವಿಗೆ ಮಾತ್ರ ಮಹತ್ವ ನೀಡದೆ, ಸ್ಪರ್ಧೆಗಳಲ್ಲಿ ಭಾಗವಹಿಸುವುದು, ಹೊಸ ವಿಷಯಗಳನ್ನು ಕಲಿಯುವುದು ಮತ್ತು ಅನುಭವಗಳನ್ನು ಪಡೆದುಕೊಳ್ಳುವುದು ಅತ್ಯಂತ ಮುಖ್ಯ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ, ಮುಂಬರುವ ಪರೀಕ್ಷೆಗಳನ್ನು ಎದುರಿಸಲಿರುವ ಎಲ್ಲಾ ಪಿಯುಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಅವರು, ಆತ್ಮವಿಶ್ವಾಸ, ಸಕಾರಾತ್ಮಕ ಚಿಂತನೆ ಮತ್ತು ದೃಢಸಂಕಲ್ಪದೊಂದಿಗೆ ಪರೀಕ್ಷೆಗಳನ್ನು ಎದುರಿಸಬೇಕು ಎಂದು ಕಿವಿಮಾತು ಹೇಳಿದರು.

ಕುಮಾರಿ ಮಂಜುಶ್ರೀ ಮತ್ತು ಕುಮಾರಿ ಶ್ರೇಯಾ ಪ್ರಾರ್ಥನೆಯನ್ನು ಮಾಡಿದರು. ಡಾ. ಪ್ರವೀಣ್ ಬ್ಲೆಸ್ಸಿಂಗ್ಟನ್ ಧನ್ಯವಾದ ಸಮರ್ಪಿಸಿದರು. ಪ್ರೊ. ರೋಹನ್ ಫೆರ್ನಾಂಡಿಸ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.

ಶ್ರೀನಿವಾಸ ವಿಶ್ವವಿದ್ಯಾಲಯದ ಸಹಕುಲಸಚಿವರಾದ ಡಾ. ಜಯಶ್ರೀ ಬೋಳಾರ್, ವಿಶ್ವವಿದ್ಯಾಲಯದ ಸಂಶೋಧನಾ ವಿಭಾಗದ ನಿರ್ದೇಶಕರಾದ ಡಾ. ಪ್ರವೀಣ್ ಬಿ. ಎಂ., ಕಾರ್ಯಕ್ರಮದ ಸಹ-ಸಂಚಾಲಕರಾದ ಡಾ. ನವೀನ್ ಕುಮಾರ್ ಜೆ. ಆರ್., ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಮುಖ್ಯಸ್ಥರಾದ ಡಾ. ಪಾವನಾ ಕೃಷ್ಣಮೂರ್ತಿ, ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಮುಖ್ಯಸ್ಥರಾದ ಡಾ. ಜುಬಿ ಮೇರಿ ಚಾಕೋ, ಇಂಜಿನಿಯರಿಂಗ್ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬಂದಿಗಳು, ರಾಜ್ಯದ ವಿವಿಧ ಪಿಯು ಕಾಲೇಜುಗಳಿಂದ ಆಗಮಿಸಿದ ಉಪನ್ಯಾಸಕರು, ಸ್ಪರ್ಧಾಳುಗಳು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ತಾಂತ್ರಿಕ ಉತ್ಸವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು 85 ಕ್ಕೂ ಅಧಿಕ ಪದವಿಪೂರ್ವ ಕಾಲೇಜುಗಳ ಸುಮಾರು 1,250 ವಿದ್ಯಾರ್ಥಿಗಳು ತಾಂತ್ರಿಕ, ಕ್ರೀಡಾ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚಂದನ ಪಿಯು ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಚಾಂಪಿಯನ್‌ಷಿಪ್ ಪ್ರಶಸ್ತಿ ಮತ್ತು ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ರನ್ನರ್ಸ್ ಅಪ್ ಚಾಂಪಿಯನ್‌ಷಿಪ್ ಪ್ರಶಸ್ತಿಯನ್ನು ಪಡೆದರು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ “ಇನ್ಸ್ಪೈರ್ 2026” ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಟ್ರೋಫಿ, ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರವನ್ನು ನೀಡಲಾಯಿತು.