ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ-3 ನಾಳೆ (ಆಗಸ್ಟ್ 2) ಆರಂಭಗೊಳ್ಳಲಿದ್ದು, ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ನಾಳೆಯಿಂದ 09 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.