ಬೆಂಗಳೂರು: ಜುಲೈ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ (ಎಲ್‌ಕೆಜಿ, ಯುಕೆಜಿ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.