ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಗೌಜಿ-ಗದ್ದಲ ಭಯಂಕರ ಜೋರಾಗಿ ನಡೆಯುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ಬಿಜೆಪಿ ಪಕ್ಷ ತಮ್ಮ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ್ದು, ಸುಮಾರು 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ.
ವಿಶೇಷವಾಗಿ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ನವರಸ ನಾಯಕ ಜಗ್ಗೇಶ್ ಕಣಕ್ಕಿಳಿಯಲಿದ್ದು, ಚುನಾವಣೆಯಲ್ಲಿ ಸ್ಪರ್ಧಿಸಲು ನಟ ಜಗ್ಗೇಶ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ.
ಯಶವಂತಪುರದಿಂದ ಮತ್ತೊಮ್ಮೆ ಶೋಭಾ ಕರಂದ್ಲಾಜೆ ಅವರು ಸ್ಪರ್ಧಿಸುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಶೋಭಾ ಅವರು ಸ್ಪರ್ಧಿಸಲು ಹಿಂದೇಟು ಹಾಕಿದ ಕಾರಣ, ಜನಪ್ರಿಯತೆ ಕಾರಣದಿಂದಾಗಿ ನಟ ಜಗ್ಗೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.
ಮೂಲತಃ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಜಡೆಮಾಯಸಂದ್ರವರಾದ ಜಗ್ಗೇಶ್ ಅವರು ತುರುವೇಕೆರೆ ಕ್ಷೇತ್ರದಲ್ಲಿ ಸೋಲು ಕಂಡಿದ್ದರು. ನಂತರ ಎಮ್ ಎಲ್ಸಿಯಾಗಿ, ಕೆ.ಎಸ್.ಆರ್.ಟಿ.ಸಿ ಉಪಾದ್ಯಕ್ಷರಾಗಿ ಸೇವೆ ಸಲ್ಲಿಸಿರುವ ಅನುಭವ ಹೊಂದಿದ್ದಾರೆ.
ಈ ನಡುವೆ ಸ್ಯಾಂಡಲ್ ವುಡ್ ನಿರ್ಮಾಪಕ ಕೆ.ಮಂಜು ಅವರು ಕೂಡ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ, ಜೆ.ಡಿ.ಎಸ್ ಪಕ್ಷವನ್ನು ಪ್ರತಿನಿಧಿಸಲಿದ್ದಾರೆ ಎನ್ನಲಾಗುತ್ತಿದೆ. ಜೆಡಿಎಸ್ ವರಿಷ್ಠ ಎಚ್. ಡಿ ದೇವೇಗೌಡ ಅವರನ್ನು ಭೇಟಿ ಮಾಡಿ, ಬಿ ಫಾರಂ ಪಡೆಯಲಿದ್ದು, ಇಂದೇ ನಾಮಪತ್ರ ಸಲ್ಲಿಸಲಿದ್ದಾರೆ ಎಂಬ ಅಂತೆ-ಕಂತೆ ಸುದ್ದಿ ಹರಿದಾಡುತ್ತಿದೆ.
ಇನ್ನು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ, ನಟ ಗಣೇಶ್ ಅವರ ಪತ್ನಿ ಶಿಲ್ಪಾ ಗಣೇಶ್ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿಲ್ಲ ಅನ್ನೋದು ಅವರಿಗೆ ಭಾರಿ ಬೇಸರ ತಂದಿದೆಯಂತೆ.