ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶ ರವಾನಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದು, ಒಬ್ಬನನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.

ಬಂಧಿತರು ಬಳ್ಳಾರಿ ಮತ್ತು ಚಿತ್ರದುರ್ಗ ಮೂಲದವರು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತಮಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಿ ನಟಿ ರಮ್ಯಾ ಸೋಮವಾರ ಜು.28 ರಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ನೀಡಿದ್ದರು.

ದರ್ಶನ್ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಇನ್ಸ್ಟಾಗ್ರಾಂ ಖಾತೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಟಿ ರಮ್ಯಾ ದೂರು ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಸಿಬಿ ಸೈಬರ್ ಠಾಣೆಗೆ ನೀಡಲಾಗಿತ್ತು.