ಬೆಂಗಳೂರು: ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರ ಸಮಾಧಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಳೆದ ಏಪ್ರಿಲ್ 24 ರಂದು ಡಾ. ರಾಜ್‌ಕುಮಾರ್ ಅವರ ಜನ್ಮದಿನದಂದು ನಟ ಚೇತನ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, “ರಾಜ್‌ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿರುವುದು ಸರಿಯೇ?” ಎಂದು ಪ್ರಶ್ನಿಸಿದ್ದರು. ಅಲ್ಲದೆ, “21ನೇ ಶತಮಾನದಲ್ಲಿ ಭೂಮಿಯೇ ಪ್ರಮುಖ ಹೋರಾಟವಾಗಿದೆ. ಸರ್ಕಾರ ಇದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು” ಎಂದು ಬರೆದುಕೊಂಡಿದ್ದರು. ಈ ಪೋಸ್ಟ್ ರಾಜಣ್ಣ ಅಭಿಮಾನಿಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.
ಈ ಸಂಬಂಧ ಹಿರಿಯ ಚಲನಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈಗಾಗಲೇ ಇಬ್ಬರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ವಿಡಿಯೋ ಮತ್ತು ಪೋಸ್ಟ್‌ನ ಸಾಕ್ಷ್ಯಗಳನ್ನು ಸಂಗ್ರಹಿಸಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶೀಘ್ರದಲ್ಲೇ ಚೇತನ್ ಅವರಿಗೆ ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.

