ಕೊಚ್ಚಿ: ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಕೇರಳದ ಆಡಳಿತಾರೂಡ ಸಿಪಿಐ(ಎಂ) ಶಾಸಕ, ಮಲಯಾಳಂ ಚಿತ್ರರಂಗದ ಖ್ಯಾತ ನಟ ಮುಕೇಶ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟ ಮುಕೇಶ್ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂದು ನಟಿಯೊಬ್ಬರ ಆರೋಪದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬುಧವಾರ ರಾತ್ರಿ ಕೊಚ್ಚಿ ನಗರದ ಮಾರಾಡು ಪೊಲೀಸ್ ಠಾಣೆಯಲ್ಲಿ ನಟನ ವಿರುದ್ಧ ಐಪಿಸಿ 376 (ಅತ್ಯಾಚಾರ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಭಾರತೀಯ ನ್ಯಾಯ ಸಂಹಿತೆ ಜಾರಿಗೆ ಬರುವ ಮುನ್ನವೇ ಈ ಅಪರಾಧ ನಡೆದಿರುವ ಹಿನ್ನೆಲೆಯಲ್ಲಿ ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುಕೇಶ್ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ವ್ಯಾಪಕ ಪ್ರತಿಭಟನೆ ನಡೆಸಿವೆ.