ಕನ್ನಡದ ಖ್ಯಾತ ನಟಿ ಕಮ್ ನಿರೂಪಕಿ ಅಪರ್ಣಾ ಅಂತ್ಯಕ್ರಿಯೆ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಸ್ಮಾರ್ತ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಿದೆ.
2 ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಜು.11ರಂದು ಬನಶಂಕರಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಚಿತ್ರರಂಗಕ್ಕೆ ಕಳೆದ 3 ದಶಕಗಳಿಂದ ಸೇವೆ ಸಲ್ಲಿಸಿರುವ ನಟಿಗೆ ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸುವ ಮೂಲಕ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿದೆ.
ಬಹಳ ದಿನಗಳಿಂದಲೂ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಬನಶಂಕರಿ 2ನೇ ಹಂತದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದೂರದರ್ಶನದಲ್ಲಿ ಸೀನಿಯರ್ ಗ್ರೇಡ್ ನಿರೂಪಕಿಯಾಗಿದ್ದ ಅಪರ್ಣಾ, ಆಕಾಶವಾಣಿ ನಿರೂಪಕಿಯಾಗಿ ಕೆಲಸ ನಿರ್ವಹಿಸಿದ್ದರು. ಅಲ್ಲದೇ ಮಜಾ ಟಾಕೀಸ್ ಕಾರ್ಯಕ್ರಮದಲ್ಲೂ ಅಭಿನಯಿಸಿದ್ದರು. ಕನ್ನಡದ ಯಶಸ್ವಿ ನಿರೂಪಕಿಯಾಗಿ 3 ದಶಕಗಳನ್ನು ಪೂರೈಸಿದ್ದಾರೆ.
ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ಅಭಿನಯಿಸಿದ್ದ ಅಪರ್ಣಾ, 2013 ರಲ್ಲಿ ಬಿಗ್‌ಬಾಸ್ ಕನ್ನಡದ ಮೊದಲ ಸೀಸನ್‌ನಲ್ಲಿ ಭಾಗವಹಿಸಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಕನ್ನಡ ಕಲಾಪ್ರಿಯರ ಮನಗೆದ್ದಿದ್ದರು.

