ಮಂಗಳೂರು: ಔಷಧವಿಲ್ಲದೆ ಆರೋಗ್ಯವಾಗಿರಲು ಯೋಗಾಭ್ಯಾಸ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಅಭಿಪ್ರಾಯಪಟ್ಟರು.
ಮಂಗಳೂರು ವಿಶ್ವವಿದ್ಯಾಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗ, ಧರ್ಮನಿಧಿ ಯೋಗ ಪೀಠ, ಯೂನಿವರ್ಸಿಟಿ ಕಾಲೇಜು ಮಂಗಳೂರು ಮತ್ತು ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ನಗರದ ರವೀಂದ್ರ ಕಲಾಭವನದಲ್ಲಿ ಗುರುವಾರ ನಡೆದ ಯೋಗ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್ ಮಾತನಾಡಿ, ಯೋಗ ಮಾನವನ ಆರೋಗ್ಯದ ಬೆಳವಣಿಗೆಗೆ ಮಾತ್ರವಲ್ಲದೆ ಅಧ್ಯಯನದ ವಿಷಯವಾಗಿಯೂ ಬಹಳ ಮುಖ್ಯವಾಗಿದೆ ಎಂದರು.
ಪ್ರಾಂಶುಪಾಲೆ ಡಾ.ಅನಸೂಯಾ ರೈ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ.ಕೆ.ಕೃಷ್ಣಶರ್ಮ ಅತಿಥಿಗಳನ್ನು ಸ್ವಾಗತಿಸಿದರು. ಮಂಗಳೂರು ವಿಶ್ವವಿದ್ಯಾನಿಲಯದ ಮಾನವ ಪ್ರಜ್ಞೆ ಮತ್ತು ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕ ಉದಯಕುಮಾರ್ ಕೆ ವಂದಿಸಿದರು. ಶ್ರೀಮತಿ ಪಾರ್ವತಿ ಎಂ.ಜಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಯೋಗ ವಿಜ್ಞಾನ ವಿಭಾಗದ ಉಪನ್ಯಾಸಕರಾದ ಅಜಿತೇಶ್, ರಂಗಪ್ಪ, ಮೋಹನ್ ಪೈಲೂರು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಯೋಗ ಥೆರಪಿ ಕೇಂದ್ರವನ್ನು ಉದ್ಘಾಟಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳು ಯೋಗದ ಬಗ್ಗೆ ಹಲವು ಗೋಷ್ಠಿಗಳಲ್ಲಿ ಮಾತನಾಡಿದರು. ಪ್ರಾಧ್ಯಾಪಕರು, ಸಂಶೋಧಕರು ಮತ್ತು ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದರು. ನಿಟ್ಟೆ ಡೀಮ್ಡ್ ವಿಶ್ವವಿದ್ಯಾಲಯದ ಸಂಶೋಧನಾ ಮತ್ತು ಕೃತಿಸ್ವಾಮ್ಯ ಸಲಹೆಗಾರ ಪ್ರೊ.ಐ.ಕರುಣಾಸಾಗರ್, ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕಿ ಪ್ರೊ.ಇಂದ್ರಾಣಿ ಕರುಣಾಸಾಗರ್ ಸಮಾರೋಪ ಸಮಾರಂಭದ ಅತಿಥಿಗಳಾಗಿದ್ದರು.