ದೆಹಲಿ: ಆರ್‌ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಗೆ ಪ್ರಕರಣದ ಬಗ್ಗೆ ಸುಪ್ರೀಂಕೋರ್ಟ್ ಗುರುವಾರ ವಿಚಾರಣೆ ನಡೆಸಿದ. ವಿಚಾರಣೆ ವೇಳೆ ಸುಪ್ರೀಂಕೋರ್ಟ್, ಮುಷ್ಕರ ನಿರತ ವೈದ್ಯರು ಕರ್ತವ್ಯಕ್ಕೆ ಮರಳುವಂತೆ ಮನವಿ ಮಾಡಿದೆ. ಆಗಸ್ಟ್ 9 ರಂದು ವೈದ್ಯೆಯ ಅತ್ಯಾಚಾರ- ಹತ್ಯೆಯ ನಂತರ ವೈದ್ಯರು ನಡೆಸುತ್ತಿರುವ ಪ್ರತಿಭಟನೆಗಳ ಬಗ್ಗೆ ಪ್ರತಿಕ್ರಿಯಿಸಿದ ಸಿಜೆಐ, “ವೈದ್ಯಕೀಯ ಸಮುದಾಯವು ಕೆಲಸಕ್ಕೆ ಮರಳಬೇಕಾಗಿದೆ. ಘಟನೆ ನಡೆದು 13 ದಿನಗಳು ಕಳೆದಿವೆ ಎಂದು ಹೇಳಿದೆ.

ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ನಂತರ ಏಮ್ಸ್ ವೈದ್ಯರು ತಮ್ಮ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ್ದಾರೆ. ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಯಲ್ಲಿ, ನವದೆಹಲಿಯ AIIMS ನಲ್ಲಿರುವ RDA 11 ದಿನಗಳ ಮುಷ್ಕರವನ್ನು ಹಿಂತೆಗೆದುಕೊಳ್ಳಲು ನಿರ್ಧರಿಸಿದೆ. ಸುಪ್ರೀಂಕೋರ್ಟ್‌ನ ಮೇಲ್ಮನವಿ ಮತ್ತು ನಿರ್ದೇಶನಕ್ಕೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ಬಂದಿದೆ. ಆರ್‌ಜಿ ಕರ್ ಮೆಡಿಕಲ್ ಕಾಲೇಜು ಘಟನೆಯ ಬಗ್ಗೆ ವಿಚಾರಣೆ ನಡೆಸಿ, ದೇಶಾದ್ಯಂತ ಆರೋಗ್ಯ ಕಾರ್ಯಕರ್ತರ ಸುರಕ್ಷತೆ ಮತ್ತು ಭದ್ರತೆಯ ಸಮಸ್ಯೆಯನ್ನು ಪರಿಹರಿಸಲು ಮುಂದಾಗಿದ್ದಕ್ಕೆ ನಾವು ಸುಪ್ರೀಂಕೋರ್ಟ್‌ಗೆ ನಮ್ಮ ಪ್ರಾಮಾಣಿಕ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತೇವೆ ಎಂದು ದೆಹಲಿಯ ಏಮ್ಸ್ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ವೈದ್ಯಕೀಯ ವೃತ್ತಿಪರರ ಸುರಕ್ಷತೆಯನ್ನು ಖಾತ್ರಿಪಡಿಸುವ ಕ್ರಮಗಳನ್ನು ಸ್ಥಾಪಿಸಲು ಒಂದು ವಾರದೊಳಗೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮುಖ್ಯಸ್ಥರೊಂದಿಗೆ ಸಭೆ ಕರೆಯುವಂತೆ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಸುಪ್ರೀಂಕೋರ್ಟ್ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ನಿಗದಿಪಡಿಸಿದೆ.