ನವದೆಹಲಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಮರ್ಥಿಸಿಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ಉಂಟಾಗುವ ವಾಯುಮಾಲಿನ್ಯ ದೊಡ್ಡ ಸಮಸ್ಯೆಯಲ್ಲ. ಕೆಲವೇ ದಿನಗಳಲ್ಲಿ ಮಾಲಿನ್ಯ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಕ್ನೋದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ದೀಪಾವಳಿ ಸಂದರ್ಭದಲ್ಲಿ ಜನರು ಸಂಭ್ರಮದಿಂದ ಪಟಾಕಿ ಸಿಡಿಸಿದ್ದಾರೆ. ಇದರಿಂದ ಮಾಲಿನ್ಯ ಹೆಚ್ಚಾಗಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಮಾಲಿನ್ಯ ಹೆಚ್ಚಾದರೆ ಅದು ಕಡಿಮೆಯೂ ಆಗುತ್ತದೆ. ಇದಕ್ಕಾಗಿ ಹೆಚ್ಚು ಚಿಂತಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಪಟಾಕಿ ಸಿಡಿಸುವುದರಿಂದ ಒಂದು ದಿನ ಮಾಲಿನ್ಯ ಉಂಟಾದರೆ ಅದನ್ನೇ ದೊಡ್ಡ ಸಮಸ್ಯೆಯಾಗಿ ಬಿಂಬಿಸಲಾಗುತ್ತಿದೆ. ಆದರೆ ತಮ್ಮ ಭ್ರಷ್ಟ ಕೃತ್ಯಗಳಿಂದ ಇಡೀ ವ್ಯವಸ್ಥೆಯನ್ನೇ ಕಲುಷಿತಗೊಳಿಸುವವರನ್ನು ಯಾರೂ ಪ್ರಶ್ನಿಸುವುದಿಲ್ಲ ಎಂದು ಟೀಕಿಸಿದ್ದಾರೆ.

ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದಕ್ಕೆ ಯಾವುದೇ ನಿರ್ಬಂಧ ವಿಧಿಸುವುದಿಲ್ಲ ಎಂದು ಸರ್ಕಾರ ನಿರ್ಧರಿಸಿತ್ತು. ಜನರು ಸಂಭ್ರಮದಿಂದ ಹಬ್ಬ ಆಚರಿಸಿರುವುದು ಒಳ್ಳೆಯ ಬೆಳವಣಿಗೆ. ಅಯೋಧ್ಯೆಯಲ್ಲಿ ತಾವು ಕೂಡ ಪಟಾಕಿ ಸಂಭ್ರಮದ ಭಾಗವಾಗಿದ್ದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.