ಕಾರವಾರ: ಗುಡ್ಡ ಕುಸಿತ ಪ್ರಕರಣ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಿಎಂ ಪ್ರತಿಕ್ರಿಯಿಸಿ, ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ.
ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

