ನವದೆಹಲಿ: ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ಮಾಡುತ್ತಿದ್ದು, ಇನ್ನು ಮುಂದೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡುವ ಸಾಧ್ಯತೆ ಇದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ, ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ಪೂರೈಸಲು ಸಾಧ್ಯವಾಗಿದ್ದು, ಉಳಿದ 5 ಕೆಜಿ ಬದಲಿಗೆ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡುತ್ತಿದೆ.

ರಾಜ್ಯ ಸರಕಾರ ನಡೆಸಿದ ಸಮೀಕ್ಷೆಯಲ್ಲಿ ಶೇ 93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ 5 ಕೆಜಿ ಅಕ್ಕಿ ಜತೆಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ. ನವದೆಹಲಿಯಲ್ಲಿರುವ ಮುನಿಯಪ್ಪ ಮಂಗಳವಾರ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣಾ ಸಚಿವ ಪ್ರಲ್ಹಾದ್ ಜೋಶಿ ಅವರನ್ನು ಭೇಟಿ ಮಾಡಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಅಕ್ಕಿ ಬದಲಿಗೆ ಬೇರೆ ಆಹಾರ ವಸ್ತುಗಳನ್ನು ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಯಾವ ರೀತಿ ಮಾಡಬೇಕು ಎಂದು ನಿರ್ಧರಿಸುತ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.