ಪೂಂಚ್: ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶಾದ್ಯಂತ ದ್ವೇಷ ಮತ್ತು ಹಿಂಸಾಚಾರವನ್ನು ಹರಡುತ್ತಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್​ನಲ್ಲಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಮತ್ತು ಆರ್​ಎಸ್​ಎಸ್​ ನಾಯಕರು ಎಲ್ಲೇ ಹೋದರೂ ಜಾತಿ, ಧರ್ಮ, ರಾಜ್ಯ ಮತ್ತು ಭಾಷೆಗಳ ನಡುವೆ ಒಡಕು ಮೂಡಿಸಿ, ಸಂಘರ್ಷ ಹುಟ್ಟು ಹಾಕಲು ಯತ್ನಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಕಾಂಗ್ರೆಸ್ ಎಲ್ಲರನ್ನು ಒಟ್ಟುಗೂಡಿಸುವ ಮೂಲಕ ಮತ್ತು ಎಲ್ಲರಿಗೂ ಅವರ ಹಕ್ಕುಗಳನ್ನು ನೀಡುವ ಮೂಲಕ ಮುಂದೆ ಸಾಗುತ್ತಿದೆ. ಕಾಂಗ್ರೆಸ್​ಗೆ ಎಲ್ಲರೂ ಸಮಾನರು. ನಾವು ಯಾರನ್ನೂ ಹಿಂದೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. ಬಿಜೆಪಿಯವರು ಜನರ ನಡುವೆ ವಿಷಬೀಜ ಬಿತ್ತಿ, ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಸೆಪ್ಟೆಂಬರ್ 18ರಂದು, ಎರಡನೇ ಹಂತದ ಮತದಾನ ಸೆಪ್ಟೆಂಬರ್ 25ರಂದು ಮತ್ತು ಮೂರನೇ ಹಂತದ ಮತದಾನ ಅಕ್ಟೋಬರ್ 1ರಂದು ನಡೆಯಲಿದೆ. ಮತ ಎಣಿಕೆ ಅಕ್ಟೋಬರ್ 8ರಂದು ನಡೆಯಲಿದೆ.