ತಿರುಪತಿ : ಆಂಧ್ರಪ್ರದೇಶದ ತಿರುಪತಿ ಜಿಲ್ಲೆಯ ಶ್ರೀಸಿಟಿ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ಸಂಭವಿಸಿದೆ. ಸತ್ಯವೇಡು ಮಂಡಲದ ಶ್ರೀಸಿಟಿಯಲ್ಲಿರುವ ‘ಟಿಲ್ ಹೆಲ್ತ್‌ಕೇರ್’ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.

ಮೃತರ ಸಂಖ್ಯೆಗೆ ಸಂಬಂಧಿಸಿದಂತೆ ಕಾರ್ಖಾನೆಯ ಆಡಳಿತ ಮಂಡಳಿಯಿಂದ ಅಧಿಕೃತ ಪ್ರಕಟಣೆ ಇನ್ನಷ್ಟೇ ಹೊರಬೀಳಬೇಕಿದೆ. ದುರಂತದಲ್ಲಿ ಹಲವು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ವೇಳೆ ಕಾರ್ಖಾನೆಯಲ್ಲಿ ರಾತ್ರಿ ಪಾಳಿಯ ಕೆಲಸ ನಡೆಯುತ್ತಿದ್ದು, ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಕರ್ತವ್ಯದಲ್ಲಿದ್ದರು ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಆವರಣ ತತ್ತರಿಸಿದ್ದು, ಗಾಯಗೊಂಡವರನ್ನು ತಕ್ಷಣವೇ ಸ್ಥಳೀಯ ಶ್ರೀಸಿಟಿ ಆಸ್ಪತ್ರೆಗೆ ರವಾನಿಸಲಾಗಿದೆ. ಅವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಘಟನೆ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ಶೋಧ ಮುಂದುವರಿದಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ದುರ್ಘಟನೆಗೆ ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರು ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ತಿಳಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಹಾಗೂ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಸಚಿವರು, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.