ಮುಂಬೈ: ಛತ್ರಪತಿ ಶಿವಾಜಿ ಮಹಾರಾಜ್ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದೇನೆ ಎಂದು ಪೊಲೀಸ್​ ಅಧಿಕಾರಿಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೆ ಬಂದ ಕೂಡಲೇ ಸ್ಥಳೀಯ ಪೊಲೀಸರು ಹಾಗೂ ಸರ್ಕಾರಿ ರೈಲ್ವೆ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.

ಎಲ್ಲಾ ಸಿಎಸ್ಎಂಟಿ ಠಾಣೆಗಳಲ್ಲಿ ಶೋಧ ಕಾರ್ಯ ನಡೆಸಲಾಗಿದೆ. ಜೊತೆಗೆ ಬಾಂಬ್​ ಬೆದರಿಕೆ ಹಾಕಿದ್ದ ವ್ಯಕ್ತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಆದರೆ ಪೊಲೀಸ್​ ಅಧಿಕಾರಿಗಳಿಗೆ ಯಾವ ಕಡೆಯಲ್ಲೂ ಬಾಂಬ್​ ಸಿಗಲಿಲ್ಲ.

ಇದಾದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಹುಸಿ ಬಾಂಬ್​ ಬೆದರಿಕೆ ಹಾಕಿದ ಶಂಕಿತನನ್ನು ಸಚಿನ್ ಶಿಂಧೆ ಎಂದು ಗುರುತಿಸಲಾಗಿದೆ. ಕರೆ ಮಾಡಿ ಸ್ವಲ್ಪ ಸಮಯದ ನಂತರ ಆರೋಪಿ ಸಚಿನ್​ ಶಿಂಧೆ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದನು. ಆ ಕೂಡಲೇ ತೀವ್ರ ಹುಡುಕಾಟ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತೀವ್ರ ತನಿಖೆ ನಡೆಸಿದ್ದಾರೆ.