ಲಕ್ನೋ: ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಉನ್ನಾವೋ ಜಿಲ್ಲೆಯ ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಭಾ ಖೇಡಾ ಗ್ರಾಮದ ಸಮೀಪ, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ಬೆಳಗ್ಗೆ ಸುಮಾರು 5:15ರ ವೇಳೆಗೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸ್ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿ ಸೇರಿ ಹಲವರನ್ನ ಲಖ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.