ನವದೆಹಲಿ: ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಸಿದ್ಧವಾಗಿದೆ ಎಂದು ಆಹಾರ ಸಚಿವ ಪ್ರಲ್ಹಾದ್ ಜೋಶಿ ಘೋಷಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡುತ್ತೇವೆ. ಕೆಜಿಗೆ 28ರೂ.ನಂತೆ ಎಷ್ಟು ಬೇಕಾದರೂ ಅಕ್ಕಿ ಕೊಡಲಿದ್ದೇವೆ ಎಂದು ಹೇಳಿದ್ದಾರೆ.
ಈ ಹಿಂದೆ ರಾಜ್ಯಕ್ಕೆ ಅಕ್ಕಿ ಕೊಡಲು ಕೇಂದ್ರ ಸುತರಾಂ ಒಪ್ಪಿರಲಿಲ್ಲ. ಇರುವ ಸ್ಟಾಕನ್ನೆಲ್ಲ ರಾಜ್ಯಕ್ಕೆ ಮಾರಾಟ ಮಾಡಿ ಖಾಲಿ ಮಾಡಿದರೆ ತುರ್ತು ಸಂದರ್ಭಗಳಲ್ಲಿ ವಿತರಣೆ ಮಾಡಲು ಕಷ್ಟ ಎಂಬುದು ಕೇಂದ್ರದ ವಾದವಾಗಿತ್ತು.
ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆಚ್ಡಿ ಕುಮಾರಸ್ವಾಮಿ ಜತೆ ಮಾತುಕತೆ ಮಾಡಿ ಪಾದಯಾತ್ರೆ ನಡೆಸಲಿದ್ದೇವೆ. ಪಕ್ಷದ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆಯೂ ಮಾತನಾಡುತ್ತವೆ ಎಂದು ತಿಳಿಸಿದ್ದಾರೆ.

