ಉತ್ತರ ಪ್ರದೇಶ: ಭಾರತೀಯ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಕಾಂಗ್ರೆಸ್ ಸಂಚು ರೂಪಿಸಿದ್ದು, ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಅವರನ್ನು ದಾಳವಾಗಿ ಬಳಸಿಕೊಂಡಿದೆ ಎಂದು ಡಬ್ಲ್ಯುಎಫ್‌ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಆರೋಪಿಸಿದ್ದಾರೆ.
ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಬ್ರಿಜ್ ಭೂಷಣ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಕುಸ್ತಿ ಫೆಡರೇಷನ್ ಮೇಲೆ ಹಿಡಿತ ಸಾಧಿಸಲು ಮತ್ತು ಬಿಜೆಪಿ ವಿರುದ್ಧ ದಾಳಿ ನಡೆಸಲು ಸಂಚು ರೂಪಿಸಲಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷ ಇಂತಹ ಕೆಲಸಗಳನ್ನು ಮಾಡುತ್ತಲೇ ಇರುತ್ತದೆ. ಇದಕ್ಕಾಗಿ ಭೂಪಿಂದರ್ ಹೂಡಾ, ಕಾಂಗ್ರೆಸ್ ಮತ್ತು ಕಾಂಗ್ರೆಸ್ ಕುಟುಂಬ ಕುಸ್ತಿಪಟುಗಳನ್ನು ದಾಳವಾಗಿ ಬಳಸಿಕೊಂಡಿವೆ’ ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.
ಹರಿಯಾಣದ ಜುಲಾನಾ ವಿಧಾನಸಭಾ ಕ್ಷೇತ್ರದಿಂದ ವಿನೇಶ್ ಫೋಗಟ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಪಕ್ಷ ಕಣಕ್ಕಿಳಿಸಿದೆ. ಜತೆಗೆ ಅಖಿಲ ಭಾರತ ಕಿಸಾನ್ ಕಾಂಗ್ರೆಸ್‌ನ ಕಾರ್ಯಾಧ್ಯಕ್ಷರನ್ನಾಗಿ ಬಜರಂಗ್ ಪೂನಿಯಾ ಅವರನ್ನು ನೇಮಕ ಮಾಡಲಾಗಿದೆ.